in

ಕನಕದಾಸ ಜಯಂತಿಯನ್ನು ಈ ದಿನ, ನವೆಂಬರ್​ 11 ರಂದು ನಾಡಿನಲ್ಲಿ ಆಚರಿಸಲಾಗುತ್ತದೆ

ಕನಕದಾಸರು
ಕನಕದಾಸರು

ಶ್ರೀ ಕನಕದಾಸರು ಕರ್ನಾಟಕದಲ್ಲಿ 15, 16 ನೇ ಶತಮಾನ ದಲ್ಲಿ ಜನಪ್ರಿಯವಾದ ಭಕ್ತಿಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ಇವರು ಹಲವಾರು ವಚನಗಳನ್ನು ನೀಡಿದ್ದಾರೆ. ನವೆಂಬರ್​ 11 ರಂದು ಕನಕದಾಸ ಜಯಂತಿಯನ್ನು ನಾಡಿನಲ್ಲಿ ಆಚರಿಸಲಾಗುತ್ತದೆ.

ಶ್ರೀ ಕನಕದಾಸರು ಮೂಲ ಹೆಸರು -ತಿಮ್ಮಪ್ಪನಾಯಕ (1508-1606)  ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250 ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ  ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ಕನಕದಾಸರು ದಂಡನಾಯಕರಾಗಿದ್ದು ಯುದ್ಧವೊಂದರಲ್ಲಿ ಸೋತ ಅವರಿಗೆ ಉಪರತಿ/ವೈರಾಗ್ಯ ಉಂಟಾಗಿ, ಹರಿಭಕ್ತರಾದರಂತೆ.

ಕನಕದಾಸ ಜಯಂತಿಯನ್ನು ಈ ದಿನ, ನವೆಂಬರ್​ 11 ರಂದು ನಾಡಿನಲ್ಲಿ ಆಚರಿಸಲಾಗುತ್ತದೆ
ಕನಕ ಗೋಪುರ

ಜೀವನ

ಜನನ

ಕನಕದಾಸರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದಲ್ಲಿ 1509ರಲ್ಲಿ ಕುರುಬ ಜನಾಂಗಕ್ಕೆ ಸೇರಿದ ಬಚ್ಚಮ್ಮ ಮತ್ತು ಬೀರಪ್ಪನಾಯಕ ಎಂಬ ದಂಪತಿಗಳ ಮಗನಾಗಿ ಜನಿಸಿದರು. ಕನಕದಾಸರು ಬರಿ ಕುರುಬ ಜಾತಿಗೆ ಸೀಮಿತವಾದ ಭಕ್ತರಲ್ಲ ಎಲ್ಲಾ ಜಾತಿಗಳಿಗೆ ಬೇಕಾದವರು. 15 – 16 ನೆಯ ಶತಮಾನದಲ್ಲೇ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂದರೆ ಕನಕದಾಸರು ಎಂದರೆ ತಪ್ಪಾಗಲಾರದು. ಕನಕದಾಸರು ಅನೇಕ ಕೀರ್ತನೆಗಳನ್ನು ರಚಿಸಿದ್ದಾರೆ.

ಐತಿಹ್ಯ

ಸುಮಾರು ಐದು ನೂರು ವರ್ಷಗಳ ಹಿಂದಿನ ಮಾತು. ವಿಜಯನಗರ ಸಾಮ್ರಾಜ್ಯದಲ್ಲಿದ್ದ ಬಂಕಾಪುರ ಪ್ರಾಂತದ ಮುಖ್ಯಪಟ್ಟಣದ ಹೆಸರು ಬಾಡ ಎಂದು. ವಿಜಯನಗರದಿಂದ ಗೋವಾಕ್ಕೆ ಹೋಗುವ ಹೆದ್ದಾರಿ. ಈ ಬಾಡದಿಂದಲೇ ಹಾಯ್ದು ಹೋಗುತ್ತಿತ್ತು. ಬಾಡ ಒಳ್ಳೇ ಆಯಕಟ್ಟಿನ ಸ್ಥಳ. ಈ ಬಂಕಾಪುರ ಪ್ರಾಂತಕ್ಕೆ ಡಣ್ಣಾಯಕ, ಬೀರಪ್ಪನಾಯಕ. (ಡಣ್ಣಾಯಕ ಎಂದರೆ ಆಯಕಟ್ಟಿನ ಸ್ಥಳದಲ್ಲಿ ಕಾದಿಟ್ಟ ಸೈನ್ಯದ ದಳಕ್ಕೆ ಸೇನಾಪತಿ ಎಂದು ನೇಮಿಸಲ್ಪಟ್ಟವನು) ಬೀರಪ್ಪನ ಹೆಂಡತಿ ಬಚ್ಚಮ್ಮ.

ಬೀರಪ್ಪನಾಯಕನಿಗೆ ತಿರುಪತಿ ತಿಮ್ಮಪ್ಪನಲ್ಲಿ ಬಹು ನಂಬಿಕೆ. ದಕ್ಷಿಣದಲ್ಲಿ ಸುಮಾರು ಒಂಬೈನೂರು ವರ್ಷಗಳ ಹಿಂದೆ ಶ್ರೀರಾಮಾನುಜಾಚಾರ್ಯರೆಂಬ ದೊಡ್ಡ ಗುರುಗಳು ಪ್ರಸಿದ್ಧರಾಗಿದ್ದರು. ಅವರು ಸ್ಥಾಪಿಸಿದ ಪಂಥಕ್ಕೆ ಶ್ರೀವೈಷ್ಣವ ಮತವೆಂದು ಹೆಸರು. ಡಣ್ಣಾಯಕ ಬೀರಪ್ಪನಾಯಕ ಮತ್ತು ಆತನ ಮಡದಿ ಬಚ್ಚಮ್ಮ ಇವರು ಶ್ರೀ ವೈಷ್ಣವ ಮತಕ್ಕೆ ಶರಣು ಹೋಗಿದ್ದರು. ಅಂದಿನಿಂದ ಇವರು ಸಹ ತಿರುಪತಿ ವಂಕಟೇಶ್ವರ ಸ್ವಾಮಿಯನ್ನೇ ತಮ್ಮ ಆರಾಧ್ಯ ದೈವವನ್ನಾಗಿ ಮಾಡಿಕೊಂಡರು.

ಬೀರಪ್ಪ ನಾಯಕ ಮತ್ತು ಬಚ್ಚಮ್ಮರಿಗೆ ಅನೇಕ ದಿನಗಳಿಂದ ಒಂದು ಹಂಬಲವಿತ್ತು. ಅದೇನೆಂದರೆ, ತಮಗೆ ಒಬ್ಬ ಕುಲದೀಪಕನಾದ ಮಗ ಜನಿಸಬೇಕು ಎಂದು. “ವಂಶೋದ್ಧಾರಕನಾದ ಒಬ್ಬ ಮಗನನ್ನು ಕರುಣಿಸು” ಎಂದು ಈ ದಂಪತಿಗಳು ತಿರುಪತಿ ತಿಮ್ಮಪ್ಪನಿಗೆ ಹರಕೆ ಹೊತ್ತಿದ್ದರು. ಅವರ ಆಸೆ ಫಲಿಸಿತು. ಬೀರಪ್ಪ ನಾಯಕ ಮತ್ತು ಬಚ್ಚಮ್ಮರಿಗೆ ಒಬ್ಬ ಮಗ ಜನಿಸಿದ. ತಂದೆ ತಾಯಿಗಳಿಗೆ ಆನಂದವೋ ಆನಂದ. ತಿರುಪತಿ ತಿಮ್ಮಪ್ಪನ ಆಶೀರ್ವಾದ ಎಂದು ಅವರು ತಮ್ಮ ಮಗುವಿಗೆ “ತಿಮ್ಮಪ್ಪ” ಎಂದೇ ನಾಮಕರಣ ಮಾಡಿದರು. ತಿಮ್ಮಪ್ಪ ಜನಿಸಿದ ಕಾಲ ಇಂತದ್ದೇ ಎಂದು ತಿಳಿಯದು; ಹದಿನೈದನೇಯ ಶತಮಾನದ ಕೊನೆಯ ವರ್ಷಗಳಲ್ಲಿ ಹುಟ್ಟಿದರು ಎಂದು ಹೇಳಬಹುದು.

ಕನಕದಾಸ ಜಯಂತಿಯನ್ನು ಈ ದಿನ, ನವೆಂಬರ್​ 11 ರಂದು ನಾಡಿನಲ್ಲಿ ಆಚರಿಸಲಾಗುತ್ತದೆ
ಉಡುಪಿ ಕೃಷ್ಣ ಮಠದ ಕನಕನ ಕಿಂಡಿ

ತಿಮ್ಮಪ್ಪನಾಯಕ ಒಬ್ಬ ಸೇನಾಧಿಪತಿಯ ಮಗನಾಗಿ ಜನಿಸಿದನಷ್ಟೆ. ಬಾಲ್ಯದಲ್ಲಿಯೇ ಅಕ್ಷರಾಭ್ಯಾಸ, ಬಂಕಾಪುರದ ಶ್ರೀನಿವಾಸಾಚಾರ್ಯರ ಬಳಿ ವಿದ್ಯಾಭ್ಯಾಸವಾಗಿ, ವ್ಯಾಕರಣ, ತರ್ಕ, ಮೀಮಾಂಸೆ, ಸಾಹಿತ್ಯಗಳಲ್ಲಿ ಪಾರಂಗತನಾದನು. ಜೊತೆಗೆ ಕತ್ತಿವರಸೆ, ಕುದುರೆ ಸವಾರಿಯನ್ನೂ ಕಲಿತ. ಕೆಲವು ವರ್ಷಗಳಲ್ಲಿ ಬೀರಪ್ಪನಾಯಕ ಮತ್ತು ಬಚ್ಚಮ್ಮ ತೀರಿಕೊಂಡರು. ತಂದೆಯ ಬಳಿಕ ತಿಮ್ಮಪ್ಪ ನಾಯಕ ತನ್ನ ಕಿರಿವಯಸ್ಸಿನಲ್ಲಿಯೇ ಬಂಕಾಪುರ ಪ್ರಾಂತಕ್ಕೆ ಡಣ್ಣಾಯಕನಾದ.

ಕನಕ ದಾಸರು ತಮ್ಮನ್ನು ತಾವೇ ಸಾವಿನ ದೇವತೆಯಾದ ಯಮನೆಂದು ತಮ್ಮ ಕೃತಿಗಳಲ್ಲಿ ಉಲ್ಲೇಖಿಸಿದ್ದಾರೆ.

ಸಾಧನೆ

ಕನಕದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರು. ವ್ಯಾಸರಾಯದಿಂದ ಮಧ್ವ ತತ್ವಶಾಸ್ತ್ರವನ್ನು ಕಲಿತು ಒಪ್ಪಿಕೊಂಡ ಕನಕದಾಸರು ಉಡುಪಿ ಶ್ರೀ ಕೃಷ್ಣನ ಅನನ್ಯ ಭಕ್ತರು. ಕಾಗಿನೆಲೆಯ ಆದಿಕೇಶವನ ಭಕ್ತರಾದ ಕನಕದಾಸರು ಜಾತಿಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದರು. ಇವರ ಕೀರ್ತನೆಗಳ ಅಂಕಿತ ಕಾಗಿನೆಲೆಯ ಆದಿಕೇಶವರಾಯ ಎಂಬುದು.

ಕನಕ ದಾಸರ ಸಾಹಿತ್ಯ ರಚನೆ

ಕನಕದಾಸರು ಸಾಹಿತ್ಯದ ವಿವಿಧ ಪ್ರಕಾರಗಳಾದ ಕೀರ್ತನೆಗಳು, ಸುಳಾದಿಗಳು, ಉಗಾಭೋಗಗಳು ಕನ್ನಡ ಸಾಹಿತ್ಯ ಲೋಕಕ್ಕೆ ಅರ್ಪಿಸಿರುವುದಲ್ಲದೆ, ಸಂಗೀತ ಪ್ರಪಂಚಕ್ಕೆ ತನ್ನದೇ ಆದಂತಹ ಕೊಡುಗೆಯನ್ನು ಮುಂಡಿಗೆಗಳ ರೂಪದಲ್ಲಿ ನೀಡಿದ್ದಾರೆ. ಸುಮಾರು 316 ಕೀರ್ತನೆಗಳು ಹಾಗೂ ಇನ್ನಿತರ ಸಾಹಿತ್ಯ ಮಾತ್ರ ಲಭ್ಯವಾಗಿರುವುದನ್ನು ಕಾಣಬಹುದಾಗಿದೆ. ಅವರ ಐದು ಮುಖ್ಯ ಕಾವ್ಯಕೃತಿಗಳು ಇಂತಿವೆ:

ಮೋಹನತರಂಗಿಣಿ
ನಳಚರಿತ್ರೆ
ರಾಮಧಾನ್ಯ ಚರಿತೆ
ಹರಿಭಕ್ತಿಸಾರ
ನೃಸಿಂಹಸ್ತವ (ದೊರೆತಿಲ್ಲ)

ಮೋಹನತರಂಗಿಣಿ

ಮೋಹನತರಂಗಿಣಿಯು 42 ಸಂಧಿಗಳಿಂದ ಕೂಡಿದ್ದು ಸಾಂಗತ್ಯದಲ್ಲಿ ರಚಿತವಾಗಿರುವ 2798 ಪದ್ಯಗಳಿವೆ. ಮೋಹನತರಂಗಿಣಿಯಲ್ಲಿ ಕನಕದಾಸರು ಕೃಷ್ಣಚರಿತ್ರೆಯನ್ನು ಹೇಳುತ್ತಾ ತಮ್ಮ ಅಧಿರಾಜ ಕೃಷ್ಣದೇವರಾಯನನ್ನೇ ಕೃಷ್ಣನಿಗೆ ಹೋಲಿಸುತ್ತಾರೆ. ಅವರ ದ್ವಾರಕಾಪುರಿ ಸ್ವಯಂ ವಿಜಯನಗರವೇ ಆಗಿರುವುದು ಇತಿಹಾಸದಿಂದ ತಿಳಿದು ಬರುತ್ತದೆ. ಮೋಹನತರಂಗಿಣಿ ಅಥವಾ ಕೃಷ್ಣಚರಿತೆ ಎಂಬ ಈ ಕಾವ್ಯದಲ್ಲಿ ಕನಕದಾಸರ ಸಮಕಾಲೀನ ಜೀವನ ಚಿತ್ರಗಳು ಹಾಗೂ ಪೌರಾಣಿಕ ಕಥೆಗಳು ಅಚ್ಚಗನ್ನಡದಲ್ಲಿ ನಿರೂಪಿತವಾಗಿವೆ. ದಣ್ಣಾಯಕನಾಗಿ ಕನಕ ಆಗಾಗ್ಗೆ ರಾಜಧಾನಿ  ವಿಜಯನಗರಕ್ಕೆ ಹೋಗಬೇಕಾಗಿತ್ತು. ವಿಜಯನಗರ ಸಾಮ್ರಾಜ್ಯದ ರಾಜವೈಭವ, ರಾಜಸಭೆ, ರಾಜಪರಿವಾರದ ಸರಸ ಸುಮ್ಮಾನ, ಶೃಂಗಾರ ಜೀವನ, ಜಲಕ್ರೀಡೆ, ಓಕುಳಿಯಾಟ, ನವರಾತ್ರಿ, ವಿಜಯನಗರದ ಪುರರಚನೆ, ಉದ್ಯಾನವನ, ಪ್ರಜೆಗಳ ವೇಷಭೂಷಣ, ರಾಜ್ಯದ ಯುದ್ಧ ವಿಧಾನ ಇತ್ಯಾದಿಗಳು ಅವನ ಮನಸೂರೆಗೊಂಡಿದ್ದವು. ಕವಿ ಮನಸಿನ ಕನಕ ತನ್ನ ಅನುಭವವನ್ನೆಲ್ಲ ಬರಹ ರೂಪಕ್ಕೆ ತಂದ. ಆ ಬರಹವೇ ಇಂದು ನಮಗೆ ಲಭ್ಯವಿರುವ ಮೋಹನತರಂಗಿಣಿ. ಕನಕನ ಯೌವನ ಕಾಲದಲ್ಲಿ ರಚಿತವಾದ ತರಂಗಿಣಿಯ ಒಡಲಲ್ಲಿ ಯುದ್ಧದ ವರ್ಣನೆಗಳು ಹೆಚ್ಚೆನ್ನಬಹುದು. ಏಕೆಂದರೆ ಕನಕ ಸ್ವತಃ ಕಲಿಯಾಗಿದ್ದವನೇ ತಾನೇ? ಹಂಪಿಯ ಪತನವನ್ನು (೧೫೬೫) ಸಹ ಕನಕ ನೋಡಿದ್ದರು. ಶಂಬರಾಸುರ ವಧೆ, ಬಾಣಾಸುರ ವಧೆ, ಹರಿಹರ ಯುದ್ಧ ಹೀಗೆ ವೀರರಸ, ರೌದ್ರರಸ ಕಾವ್ಯದಲ್ಲಿ ಮೇಳೈಸಿವೆ.

ಸೋಮಸೂರಿಯ ವೀಥಿಯ ಇಕ್ಕೆಗಳಲಿ
ಹೇಮ ನಿರ್ಮಿತ ಸೌಧದೋಳಿ
ರಮಣೀಯತೆವೆತ್ತ ಕಳಸದಂಗಡಿಯಿರ್ದುಂ
ವಾ ಮಹಾ ದ್ವಾರಕಾಪುರದೇ

ಓರಂತೆ ಮರಕಾಲರು ಹಡಗಿನ ವ್ಯವ
ಹಾರದಿ ಗಳಿಸಿದ ಹಣವ
ಭಾರ ಸಂಖ್ಯೆಯಲಿ ತೂಗುವರು ಬೇಡಿದರೆ ಕು
ಬೇರಂಗೆ ಕಡವ ಕೊಡುವರು

ಕನಕದಾಸ ಜಯಂತಿಯನ್ನು ಈ ದಿನ, ನವೆಂಬರ್​ 11 ರಂದು ನಾಡಿನಲ್ಲಿ ಆಚರಿಸಲಾಗುತ್ತದೆ
೨೦೧೯ರ ಕನಕ ಜಯಂತಿ ಆಚರಣೆ

ನಳಚರಿತ್ರೆ

ನಳಚರಿತ್ರೆಯು 9 ಸಂಧಿಗಳಿಂದ ಕೂಡಿದ್ದು ಭಾಮಿನೀ ಷಟ್ಪದಿಯಲ್ಲಿ ರಚನೆಯಾಗಿರುವ 481 ಪದ್ಯಗಳಿವೆ. ಮಹಾಭಾರತದಂತಹ ರಾಷ್ಟ್ರ ಮಹಾಕಾವ್ಯಕ್ಕೆ ಪ್ರೇರಣೆಯಾದ ಉಜ್ವಲ ಆರ್ಯೇತರ ಪ್ರೇಮಕಥೆ ನಳ ದಮಯಂತಿಯರ ಕಥೆ. ೧೩ನೇ ಶತಮಾನದ ನಳ ಚಂಪೂವಿಗಿಂತ ಈ ನಳಚರಿತ್ರೆ ಹೃದಯಸ್ಪರ್ಶಿಯಾದ ಚಿತ್ರಣಗಳಿಂದ ಚಿರಂತನ ಪ್ರೇಮದ ಕಥನದಿಂದ ಅಶ್ಲೀಲತೆಯ ಸೋಂಕಿಲ್ಲದ ಶೃಂಗಾರ ವರ್ಣನೆಯಿಂದ ಶೋಭಿಸುತ್ತಾ ಇಂದಿಗೂ ಅತ್ಯಂತ ಜನಪ್ರಿಯವಾಗಿದೆ. ನಳ ಮತ್ತು ದಮಯಂತಿಯರು ಹಂಸದ ಮೂಲಕ ಪ್ರೇಮ ಸಂದೇಶಗಳನ್ನು ಕಳಿಸುವುದು, ಅವರ ಸಂತೋಷ-ಆಮೋದ-ಪ್ರವೋದ ನಂತರದ ಕಷ್ಟಕಾಲ ಹಾಗೂ ಅದರ ನಂತರದ ಪುನರ್ಮಿಲನ ಹೀಗೆ ಎಲ್ಲರಿಗೂ ಈ ಕಥೆ ಚಿರಪರಿಚಿತ. ಕಷ್ಟ ಕಾಲದಲ್ಲಿ ಕಾಡಿನಲ್ಲಿ ಮಲಗಿರುವಾಗ ದಮಯಂತಿಯನ್ನು ಕುರಿತು ನಳ: ಲಲಿತ ಹೇಮದ ತೂಗಮಂಚದ ಹೊಳೆವ ಮೇಲ್ವಾಸಿನಲಿ ಮಲಗು ಲಲನೆಗೀ ವಿಧಿ ಬಂದುದೇ ಹಾ! ಎನುತ ಬಿಸುಸುಯ್ದ (೫-೨) ಹೀಗೆ ನಳಚರಿತ್ರೆಯಲ್ಲಿ ಕರುಣರಸಕ್ಕೇ ಪ್ರಾಧಾನ್ಯತೆ ಇದೆ. ಇನ್ನು ನಳಚರಿತ್ರೆಯಲ್ಲಿನ ಶೃಂಗಾರರಸದ ಬಗ್ಗೆ ಹೇಳುವುದಾದರೆ ಅದು ಪ್ರೌಢಶೃಂಗಾರ ಎನ್ನಬಹುದೇನೋ? ಅಲ್ಲಿ ಮೋಹನ ತರಂಗಿಣಿಯಲ್ಲಿ ಅದು ಕಣ್ಣು ಕುಕ್ಕುವ ಶೃಂಗಾರ, ಆದರೂ ಅದು ಹುಳಿಮಾವಿನಂತೆ ಹಂಚಿ ತಿನ್ನಲಾಗದು. ಮುಕ್ತವಾಗಿ ಚರ್ಚಿಸಲಾಗದು. ನಳಚರಿತ್ರೆಯ ಶೃಂಗಾರವಾದರೆ ಮಲ್ಲಿಗೆ ಮಾವಿನ ಹಾಗೆ, ಮಧುರ ರುಚಿ, ಮಧುರ ಸುವಾಸನೆ.

ರಾಮಧಾನ್ಯಚರಿತೆ

ರಾಮಧಾನ್ಯಚರಿತ್ರೆಭಾಮಿನೀ ಷಟ್ಪದಿಯಲ್ಲಿ ರಚಿತವಾಗಿರುವ 156 ಪದ್ಯಗಳನ್ನು ಒಳಗೊಂಡಿದೆ. ಈ ಕೃತಿಯಲ್ಲಿ ಧನಿಕರ ಆಹಾರಧಾನ್ಯ ಅಕ್ಕಿ ಹಾಗೂ ಕೆಳವರ್ಗದವರ ಆಹಾರಧಾನ್ಯವೆಂದು ಪರಿಭಾವಿಸಲಾಗಿರುವ ರಾಗಿಯ ನಡುವಿನ ಸಂಭಾಷಣೆಯ ಮೂಲಕ ರಾಗಿ ಹೇಗೆ ತನ್ನ ಔನ್ನತ್ಯವನ್ನು ಸಾಬೀತು ಪಡಿಸುತ್ತದೆ ಹಾಗೂ ರಾಮಧಾನ್ಯವೆಂಬ ಹೆಸರು ಪಡೆಯುತ್ತದೆ ಎಂಬುದನ್ನು ನಿರೂಪಿಸಲಾಗಿದೆ. ಇದರಲ್ಲಿ ಯುದ್ಧದ ಸನ್ನಿವೇಶ ಇಲ್ಲವಾದರೂ ವೀರರಸದ ಮಾತುಗಳಿಗೇನೂ ಕೊರತೆಯಿಲ್ಲ. ನುಡಿಗೆ ಹೇಸದ ಭಂಡ ನಿನ್ನೊಳು ಕೊಡುವರೇ ಮಾರುತ್ತರವ ಕಡುಜಡವಲಾ, ನಿನ್ನೊಡನೆ ಮಾತೇಕೆ? ಹೆಣದ ಬಾಯಿಗೆ ತುತ್ತು ನೀನಹೆ ನಿನ್ನ ಜನ್ಮ ನಿರರ್ಥಕವಲಾ ಎಲವೂ ನೀನೆಲ್ಲಿಹೆಯೋ ನಿನ್ನಯ ಬಳಗವದು.. ಮುಂತಾದ ಮಾತುಗಳಲ್ಲಿ ಕನಕದಾಸರು  ರಾಗಿಯ ನೆಪ ಹಿಡಿದು ತಮ್ಮದೇ ಆತ್ಮಕಥೆಯನ್ನು ಹೇಳುತ್ತಿರುವಂತೆ ತೋರುತ್ತದೆ. ಸಮಾಜದ ಮೇಲ್ವರ್ಗದವರ ಆಹಾರ ಧಾನ್ಯ ಭತ್ತ ಹಾಗೂ ಕೆಳವರ್ಗದವರ ಆಹಾರ ಧಾನ್ಯ  ರಾಗಿಯ ನಡುವಿನ ಸಂಭಾಷಣೆಯನ್ನು ನಿರೂಪಿಸುವ ಕನಕದಾಸರ ಸೃಜನಶೀಲತೆ ಅತಿಶಯ. ಒಂದು ರೀತಿಯಲ್ಲಿ ರಾಮಧಾನ್ಯಚರಿತ್ರೆ ಇಂದಿನ ಬಂಡಾಯ ಸಾಹಿತ್ಯದ ಬೇರು, ನವ್ಯೋತ್ತರದ ಸೂರು ಎಂದರೆ ಬಹುಶ: ತಪ್ಪಾಗಲಾರದು.

ಹರಿಭಕ್ತಿಸಾರ

ಹರಿಭಕ್ತಿಸಾರ ೧೧೦ ಭಕ್ತಿಪದ್ಯಗಳಿರುವ ಗ್ರಂಥ. ಭಾಮಿನೀ ಷಟ್ಪದಿಯಲ್ಲಿ ಸರಳಗನ್ನಡದಲ್ಲಿ ರಚಿತವಾಗಿರುವ ಈ ಗ್ರಂಥ ಕನ್ನಡದ ಭಗವದ್ಗೀತೆಯಂತಿದೆ. ಒಟ್ಟಿನಲ್ಲಿ ಕನಕದಾಸರ ಎಲ್ಲ ಕಾವ್ಯಗಳೂ ಕವಿ ಸಹಜವಾದ ವರ್ಣನೆಗಳಿಂದಲೂ ಉಪಮೆಗಳಿಂದಲೂ ಶ್ರೀಮಂತವಾಗಿದ್ದು ಅವರ ಕಾವ್ಯ ಕೌಶಲಕ್ಕೆ ಎಲ್ಲರೂ ಬೆರಗಾಗುವಂತೆ ಮಾಡಿದೆಯೆಂದರೆ ಉತ್ಪ್ರೇಕ್ಷೆಯಲ್ಲ.

ಕೀರ್ತನೆಗಳು

ಕನಕದಾಸರು 316 ಕೀರ್ತನೆಗಳನ್ನು ರಚಿಸಿದ್ದಾರೆ. ಕನಕದಾಸರ ಭಕ್ತಿ ಪಾರಮ್ಯವನ್ನು ಅವರ ಕೀರ್ತನೆಗಳಲ್ಲಿ ಕಾಣಬಹುದು. ಶ್ರೀಹರಿಯನ್ನು ತಮ್ಮ ಧಣಿಯಾಗಿ, ಇನಿಯನಾಗಿ, ಅಣೋರಣೀಯನಾಗಿ, ಮಹತೋಮಹೀಮನಾಗಿ ಅವರು ಕಂಡಿದ್ದಾರೆ. ‘ಬಾ ರಂಗ ಎನ್ನ ಮನಕೆ ಎಂದು ಹೃದಯ ಸದನಕ್ಕೆ ‘ಎಂದು ಕರೆದು ನೆಲೆ ನಿಲ್ಲಿಸಿಕೊಂಡ ಅನುಭಾವ ಅವರದು. ಒಳಗಣ್ಣಿನಿಂದ ಅವನ ಕಂಡು- ‘ಕಂಡೆ ನಾ ತಂಡ ತಂಡ ಹಿಂಡು ದೈವ ಪ್ರಚಂಡ ರಿಪು ಗಂಡ ಉದ್ಧಂಡ ನರಸಿಂಹನ’ ಎಂದು ಸಂತೋಷಪಟ್ಟಿದ್ದಾರೆ. ‘ಎಲ್ಲಿ ನೋಡಿದರಲ್ಲಿ ರಾಮ’ ಎಂಬ ಅನುಭೂತಿಯಲ್ಲಿ ಹರಿಯನ್ನು ಕಂಡ ಬಳಿಕ ‘ಬದುಕಿದೆನು ಬದುಕಿದೆನು ಭವ ಎನಗೆ ಹಿಂಗಿತು’ ಎಂಬ ಧನ್ಯತಾಭಾವ. ‘ದಾಸದಾಸರ ಮನೆಯ ದಾಸಿಯರ ಮಗ ಮಂಕುದಾಸ ಮರುಳುದಾಸ ನರಜನ್ಮಹುಳು ಪರಮಪಾಪಿ’ ಎಂದು ಕರೆದುಕೊಂಡಿದ್ದ ಅವರು ಜೀವ ಮಾಗಿ ಹಣ್ಣಾದಂತೆ ಪರಮಾತ್ಮನ ಸಾಕ್ಷಾತ್ಕಾರವಾದಂತೆ ‘ಆತನೊಲಿದ ಮೇಲೆ ಇನ್ಯಾತರ ಕುಲವಯ್ಯಾ’ ಎಂದುಕೊಳ್ಳುತ್ತಾರೆ.

ಜೈನ, ವೀರಶೈವರ ಕಿತ್ತಾಟ, ಮುಸಲ್ಮಾನ ಪ್ರಾಬಲ್ಯ ಇವುಗಳಿಂದ ಸೊರಗಿ ಹೋಗಿದ್ದ ವೈದಿಕ ಧರ್ಮಕ್ಕೆ ಪುನಶ್ಚೇತನ ನೀಡಲು ವ್ಯಾಸರಾಯರಂಥವರು ಶ್ರಮಿಸುತ್ತಿದ್ದ ಕಾಲವದು. ವೈದಿಕ ಸಂಸ್ಕೃತಿಯ ಉತ್ಥಾನಕ್ಕೆಂದು ಹುಟ್ಟು ಹಾಕಲಾದ ವಿಜಯನಗರ ಸಾಮ್ರಾಜ್ಯ ಕೃಷ್ಣದೇವರಾಯನ ಅಳಿವಿನ ನಂತರ ಪತನದ ಹಾದಿ ಹಿಡಿದಿತ್ತು. ಇಂಥಲ್ಲಿ ಕನಕದಾಸರಂಥವರ ಕಾವ್ಯಕೃಷಿ ಹಾಗೂ ಸಾರ್ವಜನಿಕ ಜೀವನ ವ್ಯಾಸರಾಯರಿಗೆ ಬೆಂಬಲದ ಶ್ರೀರಕ್ಷೆಯಾಗಿದ್ದವು. ‘ನಾವು ಕುರುಬರು ನಮ್ಮ ದೇವರು ಬೀರಯ್ಯ ಕಾವನಮ್ಮಜ್ಜ ನರಕುರಿ ಹಿಂಡುಗಳ’ ಎಂದು ವಿನೀತ ಜಾತಿ ಭಾವನೆ ತೋರಿದ್ದ ಕನಕದಾಸರು ವ್ಯಾಸರಾಯರ ಸಂಪರ್ಕದ ನಂತರ ‘ಕುಲಕುಲಕುಲವೆಂದು ಹೊಡೆದಾಡದಿರಿ’ ಎಂದು ಜಂಕಿಸಿ ಕೇಳುವ ಹಾಗಾದರು.

ಕನಕದಾಸ ಜಯಂತಿಯನ್ನು ಈ ದಿನ, ನವೆಂಬರ್​ 11 ರಂದು ನಾಡಿನಲ್ಲಿ ಆಚರಿಸಲಾಗುತ್ತದೆ
ಅರ್ಜುನ್ ಸರ್ಜಾ ಮತ್ತು ದ್ರುವ ಸರ್ಜಾ ನಾಡಿನ ಜನತೆಗೆ ಕನಕದಾಸ ಜಯಂತಿ ಶುಭ ಕೋರಿದರು

ಇಂಥ ನಡವಳಿಕೆಗಳಿಂದ ವೈದಿಕ ಧರ್ಮದ ಗುತ್ತಿಗೆ ತಮ್ಮದು ಎಂದು ಭಾವಿಸಿದ್ದ ಬ್ರಾಹ್ಮಣರಿಗೆ ಕನಕದಾಸರು ಬಿಸಿ ತುಪ್ಪವಾದರು. ಹಿಂದೂ ಸಮಾಜದಲ್ಲಿ ಈ ಬ್ರಾಹ್ಮಣ ಬ್ರಾಹ್ಮಣೇತರ ಕಂದರ/ಕ ದೊಡ್ಡದಾಗುತ್ತಾ ಹೋದಂತೆ ವ್ಯಾಸಪೀಠದ ಜೊತೆಗೆ ದಾಸಕೂಟದ ರಚನೆಯೂ ಆಗಬೇಕಾದಂತಹ ಅನಿವಾರ್ಯತೆ ಮೂಡಿತು. ಉಚ್ಚಕುಲದ ಮಾಧ್ವ ಬ್ರಾಹ್ಮಣರು ಶಾಸ್ತ್ರಾಧ್ಯಯನ-ತರ್ಕ-ವ್ಯಾಕರಣಾದಿ ವಿಶಿಷ್ಟ ಜ್ಞಾನಸಂಪನ್ನರಾಗಿ ಶಬ್ದ ಶಬ್ದಗಳನ್ನು ತಿಕ್ಕಿ ತೀಡಿ ನಿಷ್ಪತ್ತಿ ಹಿಡಿದು ಸಿದ್ಧಾಂತ ಪ್ರಮೇಯಗಳನ್ನು ಮಂಡಿಸುವುದೇ ಮುಂತಾದ ಪ್ರಕ್ರಿಯೆಗಳನ್ನು ವ್ಯಾಸಪೀಠದಲ್ಲಿ ನಡೆಯಿಸುತ್ತಿದ್ದರು. ಪುರಂದರದಾಸ, ಕನಕದಾಸ, ಜಗನ್ನಾಥದಾಸ ಮೊದಲಾದವರ ಪ್ರಾತಿನಿಧಿಕ ಸಂಘಟನೆಯೇ ದಾಸಕೂಟ. ಇವರೂ ಮಾಧ್ವ ಮತ ಪ್ರಮೇಯಗಳನ್ನೇ ಪಸರಿಸುತ್ತಾ ಆಚರಿಸುತ್ತಿದ್ದರಾದರೂ ಅವುಗಳನ್ನು ಅರಿಯಲು ಸಂಸ್ಕೃತ ಜ್ಞಾನದ ಅನಿವಾರ್ಯತೆಯನ್ನು ನಿರಾಕರಿಸಿ, ಜಾತಿ ಮತಗಳ ಕಟ್ಟು ಪಾಡಿಲ್ಲದ ಇವರು ಶಾಸ್ತ್ರಾಧ್ಯಯನದ ಅನಿವಾರ್ಯತೆ ಇಲ್ಲದೆ ತಮ್ಮ ಅನುಭಾವದಿಂದ ಹೊರಹೊಮ್ಮುವ ಭಕ್ತಿಭಾವನೆಗಳನ್ನು ತಮ್ಮ ತಾಯ್ನುಡಿಯಲ್ಲಿ ಹಾಡಿ ಲೋಕಪಾವನವನ್ನೂ ಆತ್ಮೋದ್ಧಾರವನ್ನೂ ಮಾಡ ಬೇಕೆನ್ನುವವರು. ಇಂಥಾ ದಾಸಕೂಟವನ್ನು ಹುಟ್ಟುಹಾಕಿ ಪೋಷಿಸಿ ಬೆಳೆಸಿದವರು ವ್ಯಾಸರಾಯರು ಹಾಗೂ ವಾದಿರಾಜರು. ಇಷ್ಟಿದ್ದರೂ ದಾಸಕೂಟ ವ್ಯಾಸಪೀಠಗಳ ನಡುವೆ ಆಗಿಂದಾಗ್ಗೆ ಘರ್ಷಣೆಗಳು ನಡೆದೇ ಇದ್ದವು. ಈ ಕುರಿತು ಕನಕ ಪುರಂದರರ ಕೀರ್ತನೆಗಳೇ ನಮಗೆ ಸೂಚ್ಯವಾಗಿ ಹೇಳುತ್ತವೆ. ಕುಲಕುಲವೆನ್ನುತಿಹರು ಕುಲವಾವುದು ಸತ್ಯ ಸುಖವುಳ್ಳ ಜನರಿಗೆ. ತೀರ್ಥವನು ಪಿಡಿದವರು ತಿರುನಾಮಧಾರಿಗಳೇ ಜನ್ಮ ಸಾರ್ಥಕವಿರದವರು ಭಾಗವತರಹುದೇ ಆವ ಕುಲವಾದರೇನು ಆವನಾದರೇನು ಆತ್ಮಭಾವವರಿತ ಮೇಲೆ. ಅವರ ಕೀರ್ತನೆಗಳಲ್ಲಿ ಅವರ ಸಂದೇಶ ನೇರ ಮತ್ತು ಖಚಿತ. ಹಾಗೆಯೇ ಅಮೂರ್ತವಾದ ಪ್ರತಿಮಾ ನಿರೂಪಣೆಯಲ್ಲಿ ಪರಿಣತಿ, ಹಾಗೂ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತ ಸಾಹಿತ್ಯಗಳ ಪರಿಚಯವನ್ನು ಅವರ ಸಾಹಿತ್ಯದಲ್ಲಿ ಕಾಣಬಹುದು.

ಧನ್ಯವಾದಗಳು.

What do you think?

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

GIPHY App Key not set. Please check settings

ಆಕ್ಟೊಪಸ್

ಎಂಟು ಕಾಲುಗಳುಳ್ಳ ಜಲಚರ ಆಕ್ಟೊಪಸ್

ನೆಲ್ಲಿಕಾಯಿಯ ಜ್ಯೂಸ್

ನೆಲ್ಲಿಕಾಯಿಯ ಜ್ಯೂಸ್ ಕುಡಿಯಿರಿ, ಹಲವು ಲಾಭ ಪಡೆಯಿರಿ